ಶಿವಮೊಗ್ಗ ನಗರದಲ್ಲಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ನಿಯಮಬಾಹಿರ (ಡಿಫೆಕ್ಟಿವ್) ನಂಬರ್ ಪ್ಲೇಟ್ ಅಳವಡಿಸಿಕೊಂಡು ಸಂಚರಿಸುತ್ತಿದ್ದ 74 ದ್ವಿಚಕ್ರ ವಾಹನಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಇ-ಚಲನ್ ಸೇರಿದಂತೆ ಸಂಚಾರ ನಿಯಮ ಉಲ್ಲಂಘನೆಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕೆಲವರು ನಂಬರ್ ಪ್ಲೇಟ್ ಇಲ್ಲದೆ ಅಥವಾ ಕಾನೂನುಬಾಹಿರ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ತಪಾಸಣೆ ಕೈಗೊಳ್ಳಲಾಯಿತು.
ತಪಾಸಣೆಯ ವೇಳೆ ನಂಬರ್ ಪ್ಲೇಟ್ ಇಲ್ಲದ ಹಾಗೂ ನಿಯಮಬಾಹಿರ ನಂಬರ್ ಪ್ಲೇಟ್ ಹೊಂದಿದ್ದ ಒಟ್ಟು 74 ದ್ವಿಚಕ್ರ ವಾಹನಗಳನ್ನು ಪರಿಶೀಲಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ ಅವರು ವಾಹನ ಸವಾರರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಸದ್ಯ ವಾಹನ ಮಾಲೀಕರಿಗೆ ದಂಡ ವಿಧಿಸಿ, ನೋಟಿಸ್ ನೀಡಿ ವಾಹನಗಳನ್ನು ಹಿಂತಿರುಗಿಸಲಾಗಿದೆ. ಆದರೆ ಮುಂದಿನ ದಿನಗಳಲ್ಲಿ ಇದೇ ರೀತಿಯ ಉಲ್ಲಂಘನೆ ಮರುಕಳಿಸಿದರೆ ನೇರವಾಗಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ನಂಬರ್ ಪ್ಲೇಟ್ ಇಲ್ಲದ ಅಥವಾ ನಿಯಮಬಾಹಿರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಅಪರಾಧ ಚಟುವಟಿಕೆಗಳಲ್ಲಿ ಬಳಕೆಯಾಗುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಾಚರಣೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ದೇವರಾಜ್, ಸಬ್‌ಇನ್ಸ್‌ಪೆಕ್ಟರ್‌ಗಳು ಹಾಗೂ ಪೊಲೀಸ್ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದು, ಅವರ ಸೇವೆಯನ್ನು ಜಿಲ್ಲಾ ರಕ್ಷಣಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.