ಶಿವಮೊಗ್ಗ : ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಮತ್ತು ಸಾಗಾಣಿಕೆ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ೨೫ ಸ್ಥಳಗಳ ಮೇಲೆ ದಾಳಿ ನಡೆಸಿ ಸುಮಾರು 17 ಸಾವಿರ ಮೆಟ್ರಿಕ್ ಟನ್ ಅಕ್ರಮ ಮರಳನ್ನು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಜೆಸಿಬಿ, ಹಿಟಾಚಿ, ಟಿಪ್ಪರ್ ಲಾರಿ, ಟ್ರ್ಯಾಕ್ಟರ್, ಬೋಟ್ ಹಾಗೂ ಮರಳು ಫಿಲ್ಟರ್ ಯಂತ್ರ ಸೇರಿದಂತೆ ೫೨ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕರ್ನಾಟಕ ಲೋಕಾಯುಕ್ತ ಬೆಂಗಳೂರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲ್ಲೂಕುಗಳಲ್ಲಿ ಹರಿಯುವ ತುಂಗಭದ್ರಾ ಮತ್ತು ಶರಾವತಿ ನದಿ ಪಾತ್ರಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಚಟುವಟಿಕೆಗಳ ಪರಿಶೀಲನೆಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಘಟಕದ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಹಾಗೂ ಪೊಲೀಸ್ ಉಪಾಧೀಕ್ಷಕ ಬಿ.ಪಿ. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ೧೫ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಭದ್ರಾವತಿ ತಾಲೂಕಿನ ನಿಂಬೆಗೊಂದಿ, ಮಂಗೋಟೆ, ಸನ್ಯಾಸಿಕೊಡಮಗ್ಗಿ, ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಮತ್ತು ಕೂಡಲಿ, ತೀರ್ಥಹಳ್ಳಿ ತಾಲೂಕಿನ ಮಂಡುವಳ್ಳಿ, ತೂದೂರು ಹಾಗೂ ದಬ್ಬಣಗದ್ದೆ, ಹೊಸನಗರ ತಾಲೂಕಿನ ಹರಿದ್ರಾವತಿ, ಸುತ್ತಾ, ಸಂಪಕಟ್ಟೆ ಮತ್ತು ಸಾಗರ ತಾಲೂಕಿನ ಆವಿನಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ಮರಳು ಕ್ವಾರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.
ಇದರ ಜೊತೆಗೆ ಶಿವಮೊಗ್ಗ ನಗರದ ಕುವೆಂಪು ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳ ಕಚೇರಿಯ ಮೇಲೂ ಶೋಧನಾ ವಾರಂಟ್ ಆಧರಿಸಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಯಿತು. ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ.

ಕಾರ್ಯಾಚರಣೆಯ ವೇಳೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್‌ಟಿಒ, ಅರಣ್ಯ ಇಲಾಖೆ, ಸಹಾಯಕ ಭೂ ದಾಖಲೆ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಮತ್ತು ಗಣಿಗಾರಿಕೆ ಕುರಿತು ವ್ಯಾಪಕ ದೂರುಗಳು ಬಂದಿದ್ದವು. ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿಯೂ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ದೂರುಗಳ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಮನ್ವಯಿತ ಕಾರ್ಯಾಚರಣೆ ನಡೆಸಿದ್ದು, ಮುಂದಿನ ದಿನಗಳಲ್ಲೂ ತನಿಖೆ ಮುಂದುವರಿಯುವ ಸಾಧ್ಯತೆ ಇದೆ.
ಈ ಕಾರ್ಯಾಚರಣೆಯಲ್ಲಿ ಶಿವಮೊಗ್ಗ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
