ಶಿವಮೊಗ್ಗ, : ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹುಡ್ಕೋ ಕಾಲೋನಿಯ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿ ₹1.50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
2025ರ ಆಗಸ್ಟ್ 3ರಿಂದ 10ರ ಅವಧಿಯಲ್ಲಿ ವಿನೋಬನಗರ ಹುಡ್ಕೋ ಕಾಲೋನಿಯ ಮನೆಯೊಂದರಲ್ಲಿ 12 ಗ್ರಾಂ ತೂಕದ ಚಿನ್ನಾಭರಣ ಕಳವು ನಡೆದಿತ್ತು. ಈ ಸಂಬಂಧ ಕಾಶಿಪುರದ ಲಕ್ಷ್ಮೀಪುರ ಬಡಾವಣೆಯ ನಿವಾಸಿ ಉಷಾ ಅವರು ಮೇ 26, 2026ರಂದು ದೂರು ನೀಡಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್-2023ರ ಕಲಂ 305ರಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಹಾಗೂ ಡಿವೈಎಸ್‌ಪಿ ಸಂಜೀವ್ ಕುಮಾರ್ ಟಿ. ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಯಿತು. ವಿನೋಬನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂತೋಷಕುಮಾರ್ ಡಿ.ಕೆ. ಅವರ ನೇತೃತ್ವದಲ್ಲಿ ಪಿಎಸ್‌ಐ ತಿರುಮಲೇಶ್ ಜಿ. ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿತು.
ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಿದ ತಂಡ, ಪ್ರಕರಣದಲ್ಲಿ ಭಾಗಿಯಾಗಿದ್ದ ಶಿವಮೊಗ್ಗ ತಾಲೂಕಿನ ರಟ್ಟೆಹಳ್ಳಿ ಗ್ರಾಮದ ಲೋಹಿತ್ ಕುಮಾರ್ ಬಿ. (29) ಎಂಬಾತನನ್ನು ಬಂಧಿಸಿದೆ. ಆರೋಪಿಯಿಂದ ಕಳವುಗೊಂಡಿದ್ದ 10.7 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಅಂದಾಜು ಮೌಲ್ಯ ₹1.50 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಕಳವು ಮಾಲು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರು ಶ್ಲಾಘಿಸಿದ್ದಾರೆ.
