ಶಿವಮೊಗ್ಗ:
ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದೆ.
ಶಿವಮೊಗ್ಗ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಬಂದ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೊಲೀಸರು ಎಚ್ಚೆತ್ತುಕೊಂಡು ತಕ್ಷಣ ಸ್ಥಳಕ್ಕೆ ಧಾವಿಸಿದರು. ಶ್ವಾನದಳ ಹಾಗೂ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಯನ್ನು ನಿಯೋಜಿಸಿ ನ್ಯಾಯಾಲಯದ ಸಂಪೂರ್ಣ ಆವರಣ, ನ್ಯಾಯಾಂಗ ಕೊಠಡಿಗಳು, ಕಚೇರಿಗಳು, ಕಾರಿಡಾರ್ಗಳು ಹಾಗೂ ಸಾರ್ವಜನಿಕರ ಸಂಚಾರ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಯಿತು.
ಘಟನೆ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನ್ಯಾಯಾಲಯಕ್ಕೆ ಆಗಮಿಸುವ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ವಾಹನಗಳನ್ನು ಕಡ್ಡಾಯವಾಗಿ ಪರಿಶೀಲಿಸಲಾಗುತ್ತಿದೆ. ಅನುಮಾನಾಸ್ಪದ ವಸ್ತುಗಳ ಪತ್ತೆಗೆ ವಿಶೇಷ ನಿಗಾವಹಿಸಲಾಗಿದೆ.
ಬಾಂಬ್ ಬೆದರಿಕೆ ಪ್ರಕರಣದ ಹಿನ್ನೆಲೆಯಲ್ಲಿ ವಕೀಲರ ಸಂಘವು ತನ್ನ ಸದಸ್ಯರಿಗೆ ತುರ್ತು ಮನವಿ ಮಾಡಿದ್ದು, ನ್ಯಾಯಾಲಯಕ್ಕೆ ಆಗಮಿಸುವ ವೇಳೆ ಯಾವುದೇ ಆತಂಕಕ್ಕೆ ಒಳಗಾಗದೆ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ತಂಡದ ತಪಾಸಣಾ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಸೂಚಿಸಿದೆ.
ಇದೇ ವೇಳೆ ನ್ಯಾಯಾಲಯದ ಸಾಮಾನ್ಯ ಕಾರ್ಯಚಟುವಟಿಕೆಗಳಿಗೆ ಭದ್ರತಾ ಕ್ರಮಗಳ ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ. ಬೆದರಿಕೆ ಸಂದೇಶದ ಮೂಲ ಪತ್ತೆ ಹಾಗೂ ಅದರ ನೈಜತೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
