ಶಿವಮೊಗ್ಗ : ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಪರೀಕ್ಷೆಯ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಭಾರೀ ಹೈಡ್ರಾಮಾ ನೆರವೇರಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮೆರವಣಿಗೆಯು ಬಿಜೆಪಿ ಕಚೇರಿಯತ್ತ ಸಾಗುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆಯಲು ಯತ್ನಿಸಿದರು. ಆದರೆ, ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಭದ್ರತಾ ವಲಯವನ್ನು ಭೇದಿಸಿ, ಬ್ಯಾರಿಕೇಡ್‌ಗಳನ್ನು ತಳ್ಳಿ ಬಿಜೆಪಿ ಕಚೇರಿಯೊಳಗೆ ನುಗ್ಗಲು ಯತ್ನಿಸಿದರು.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ಹೈಡ್ರಾಮಾವೊಂದು ನಡೆಯಿತು. ಪೊಲೀಸರು ವಶಕ್ಕೆ ಪಡೆದು ವಾಹನಕ್ಕೆ ಹತ್ತಿಸುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತನೊಬ್ಬ ಪೊಲೀಸ್ ಜೀಪ್ ಮೇಲೆಯೇ ಹತ್ತಿ ನಿಂತು ಕಾಂಗ್ರೆಸ್ ಪಕ್ಷದ ಬಾವುಟ ಬೀಸುತ್ತಾ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದನು.
ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಜೀಪ್ ಮೇಲೇರಿದ್ದ ಕಾರ್ಯಕರ್ತನನ್ನು ಕೆಳಗಿಳಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು. ರಂಪಾಟ ನಡೆಸಿದ ಪ್ರಮುಖ ಕಾರ್ಯಕರ್ತರನ್ನು ಖಾಕಿ ಪಡೆ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದೆ.
ಅಹಿತಕರ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗದ ಬಿಜೆಪಿ ಕಚೇರಿಯ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಮುಂದುವರಿದಿದೆ.
